ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಫೈನಲ್ ಆಗಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು, ಭಾನುವಾರ ರಾತ್ರಿ ನಡೆದ ಸಚಿವರ ಸಭೆಯಲ್ಲಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಅದಲ್ಲದೆ ತಮಗೆ ಸಂಡೂರು ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ನೀಡಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅನ್ನಪೂರ್ಣ ತುಕರಾಂ ಅವರು ಕೋರಿದ್ದಾರೆ.
ಇದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರನ್ನು ಸಹ ಭೇಟಿ ಮಾಡಿದ್ದಾರೆ.
ಚನ್ನಪಟ್ಟಣಕ್ಕೆ ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ತಿಳಿಸಿದ್ದಾರೆ. ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಫೈನಲ್ ಎಂಬ ಮಾಹಿತಿ ನೀಡಲಾಗಿದೆ. ಮೂರು ಕ್ಷೇತ್ರಗಳಲ್ಲಿ ನಮಗೆ ಗೆಲ್ಲುವ ಅವಕಾಶ ಹೆಚ್ಚಿದೆ. ಎರಡು ದಿನದಲ್ಲಿ ಅಭ್ಯರ್ಥಿಗಳ ಘೋಷಣೆ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯ ದಾಳಿಯ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕು. ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಸಮುದಾಯ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸುತ್ತೇನೆ. ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಎಲ್ಲರಿಗೂ ಜವಾಬ್ದಾರಿ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇವೆ.ಅದರಂತೆ ಎಲ್ಲರೂ ವಹಿಸಿದ ಜಬಾಬ್ದಾರಿ ನಿಭಾಯಿಸಬೇಕು ಎಂದು ಸೂಚಿಸಿದ್ದಾರೆ.