ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ. ಇನ್ನೂ ಆರೋಪಿ ದರ್ಶನ್ ಅವರ ಮಧ್ಯಂತರ ಜಾಮೀನು ಭವಿಷ್ಯ ಇಂದು ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.
ಅನಾರೋಗ್ಯದ ಕಾರಣ ನೀಡಿ ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ತೀವ್ರ ಬೆನ್ನು ನೋವು ಇರುವುದರಿಂದ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದೆ. ಹಾಗಾಗಿ ಅವರ ಪರ ವಕೀಲರಾದ ಸಿ.ವಿ. ನಾಗೇಶ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ನಲ್ಲಿ ಎರಡು ದಿನಗಳ ಕಾಲ ಇದರ ವಿಚಾರಣೆ ನಡೆಸಲಾಗಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ಈ ಅರ್ಜಿಯ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿದೆ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಾದ-ಪ್ರತಿವಾದವನ್ನು ಆಲಿಸಿ ಇಂದು ಆದೇಶ ಪ್ರಕಟಿಸಲಿದ್ದಾರೆ.