ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 40 ವರ್ಷದ ರಾಜಕೀಯ ಜೀವನಲ್ಲಿ ಸಿಎಂ ತನಿಖೆಗೆ ಹಾಜರಾಗುತ್ತಿರುವುದು ಇದೇ ಮೊದಲು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಕೃಷ್ಣವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ನಲ್ಲಿ ಇರುವ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡುವ ಮೂಲಕ ವಿಚಾರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಮುಂದೇನು?
ತನಿಖೆ ಸಂಬಂಧ ಸದ್ಯ ಸಮನ್ಸ್ ನೀಡಿದ್ದು ಸಿಎಂ ಸಿದ್ದರಾಮಯ್ಯಗೆ ಹಲವು ಪ್ರಶ್ನೆಗಳನ್ನ ಕೇಳಿ ವಿಚಾರಣೆ ನಡೆಸಲಾಗುತ್ತಿದೆ. ಅವರ ಉತ್ತರಗಳನ್ನು ದಾಖಲಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗುತ್ತದೆ. ಕೊನೆಗೆ ಲೋಕಾಯುಕ್ತ ತನಿಖಾ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಲಿದೆ. ಆ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಲಿದೆ.