ರಾಮನಗರ: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ, 3 ಪಕ್ಷದ ನಾಯಕರುಗಳು ರಣಕಣದಲ್ಲಿ ಕೊನೆಯ ಕ್ಷಣದ ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.
ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ ಹೇಳಿದರು.
ಜಮೀರ್ ಹೇಳಿಕೆ
ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.
ಇನ್ನೂ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು “ಕಾಲಾ ಕುಮಾರಸ್ವಾಮಿ” ಎಂದು ಉರ್ದು ಭಾಷೆಯಲ್ಲಿ ಕರೆಯುವ ಮೂಲಕ ಜಮೀರ್ ಅಹ್ಮದ್ ಖಾನ್, ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಶೀಘ್ರವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.