ಕೇರಳ: ದೇಶದ ವಿವಿಧ ಭಾಗಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. 81 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. 81 ಕ್ಷೇತ್ರಗಳ ಪೈಕಿಯಲ್ಲಿ ಮೊದಲ ಹಂತವಾದ ಇಂದು 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಅದರಂತೆ ಚುನಾವಣೆಯ ಹಿನ್ನೆಲೆಯಲ್ಲಿ ಮತ ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ಪ್ರಿಯಾಂಕಾ ಗಾಂಧಿ ಪ್ರೀತಿಯ ಸಹೋದರ, ಸಹೋದರಿಯರೇ ಎಲ್ಲರೂ ಮತ ಚಲಾಯಿಸಿ, ಇಂದು ಪ್ರಜಾಪ್ರಭುತ್ವದ ತೀರ್ಪಿನ ದಿನ. ಮತಗಟ್ಟೆಗೆ ಭೇಟಿ ನೀಡಿ, ನಿಮ್ಮ ಅಮೂಲ್ಯವಾದ ಹಕ್ಕನ್ನು ಚಲಾಯಿಸಿ. ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ ಕೈ ಜೋಡಿಸೋಣ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ರಾಹುಲ್ ಗಾಂಧಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಉತ್ತರ ಪ್ರದೇಶದ ರಾಯ್‌ಬರೇಲಿ ಪ್ರದೇಶ ಉಳಿಸಿಕೊಂಡು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದ ತೆರವುಗೊಂಡ ವಯನಾಡ್ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದೆ.