ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ.. ಎಚ್ಚೆತ್ತ ಪೊಲೀಸ್ ಇಲಾಖೆ…ಧಾರವಾಡದಲ್ಲಿ ರೇಡ್..
ಧಾರವಾಡ: ಹುಬ್ಬಳ್ಳಿಯಲ್ಲಿ ಅಪಾಯಕಾರಿ ಮಾಂಜಾ ದಾರಕ್ಕೆ ಮಹಿಳೆ ಬಲಿಯಾದ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಮಾಂಜಾ ದಾರ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮಾಂಜಾ ದಾರವನ್ನು ವಶಕ್ಕೆ ಪಡೆದಿದ್ದಾರೆ.
ಧಾರವಾಡ ಎಸಿಪಿ ಪ್ರಶಾಂತ ಸಿದ್ದನಗೌಡರ್ ನೇತೃತ್ವದಲ್ಲಿ ಪೊಲೀಸ್ ತಂಡವು ಧಾರವಾಡ ಮಾರುಕಟ್ಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 500ಕ್ಕೂ ಹೆಚ್ಚು ಮಾಂಜಾ ದಾರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ಸಾವಿನ ಬಳಿಕವೂ ಅಪಾಯಕಾರಿ ಮಾಂಜಾ ದಾರದ ಮಾರಾಟ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಧಾರವಾಡ ಮಾರುಕಟ್ಟೆಯಲ್ಲಿ ಮಾಂಜಾ ದಾರ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಮಾಂಜಾ ದಾರದ ಮಾರಾಟ ಹಾಗೂ ಅಕ್ರಮ ದಾಸ್ತಾನು ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾಂಜಾ ದಾರದ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ.
ಮಹಿಳೆ ಸಾವಿನ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ — ಮಾಂಜಾ ದಾರ ಮಾರಾಟಗಾರರಿಗೆ ಈಗ ಖಾಕಿ ಖಡಕ್ ಎಚ್ಚರಿಕೆ.