ಮೂವರನ್ನು ಕಳೆದುಕೊಂಡ ಕುಟುಂಬಗಳು ಅನಾಥ; ಆ ಕುಟುಂಬಗಳ ನೊಗ ಹೊರ್ತಾರಾ ಯಶ್…
ಹುಬ್ಬಳ್ಳಿ: ರಾಕಿಂಗ್ ಸ್ಟಾರ್ ಯಶ್ ಮೇಲಿನ ಹುಚ್ಚು ಅಭಿಮಾನದಿಂದ ಮೂರು ಯುವಕರು ಸಾವನ್ನಪ್ಪಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.
ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹನುಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು.
ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ನಟ ಯಶ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ತಮ್ಮ ಮುಂಬರುವ ಚಿತ್ರದ ಕೆಲಸದ ಮೇಲೆ ವಿದೇಶಕ್ಕೆ ತೆರಳುವುದಾಗಿ ಈ ಹಿಂದೆಯೇ ಹೇಳಿದ್ದ ಯಶ್ ಈ ಘಟನೆ ನಡೆದ ಹಿನ್ನೆಲೆಯಲ್ಲಿ ವಿಶೇಷ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಗದಗಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗ ಮೂಲಕ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ . ಅಭಿಮಾನಕ್ಕೆ ಬೆಲೆ ಕಟ್ಟಲಾಗದು ಎಂಬ ಮಾತಿನಂತೆ ಹುಚ್ಚು ಅಭಿಮಾನದಿಂದ ಮೂವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕುಟುಂಬಕ್ಕೆ ಅಸರೆಯಾಗಬೇಕಿದ್ದ ಈ ಮೂವರು ತಂದೆ, ತಾಯಿಯನ್ನು ಅನಾಥರನ್ನಾಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ಮೂವರ ಕುಟುಂಬಕ್ಕೆ ಮಗನಾಗ್ತಾರಾ ಎಂಬುದನ್ನು ಕಾದು ನೋಡಬೇಕು.
ಉದಯ ವಾರ್ತೆ ಗದಗ