IND vs SL: ವಿಶ್ವದಾಖಲೆ ಬರೆಯಲು ಸಜ್ಜಾದ ಕಿಂಗ್ ಕೊಹ್ಲಿ!

Share to all

ಆಗಸ್ಟ್ 2 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಹೌದು, ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 152 ರನ್​ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಬಹುದು.

ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಸದ್ಯ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಕ್ರಿಕೆಟ್ ದೇವರು ಒಟ್ಟು 350 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರು. ಆದರೀಗ ಈ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 57 ಪಂದ್ಯಗಳ ಅವಕಾಶವಿದೆ.

ಅಂದರೆ ಏಕದಿನ ಕ್ರಿಕೆಟ್​ನಲ್ಲಿ 292 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈಗಾಗಲೇ 13848 ರನ್ ಪೇರಿಸಿದ್ದಾರೆ. ಹೀಗಾಗಿ ಮುಂದಿನ 57 ಪಂದ್ಯಗಳಲ್ಲಿ ಒಟ್ಟು 152 ರನ್ ಬಾರಿಸಿದರೂ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗುವುದು ಖಚಿತ.

ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಕೊಹ್ಲಿಗೆ ಬೇಕಿರುವುದು ಕೇವಲ 116 ರನ್​ಗಳು ಮಾತ್ರ. ಶ್ರೀಲಂಕಾ ವಿರುದ್ಧ 116 ರನ್ ಕಲೆಹಾಕಿದರೆ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.


Share to all

You May Also Like

More From Author