ಬೆಂಗಳೂರು: ಮುಡಾ ಸಂಗ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.
ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಅಲ್ಲಿಯವರೆಗೆ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.