ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.
ಇದರ ಬೆನ್ನಲ್ಲೇ ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆಯನ್ನು ಬೆರೆಸಿರುವುದು ತಪಾಸಣೆಯಿಂದ ಸ್ಪಷ್ಟವಾಗಿದೆ ಎಂದು ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಕುರಿತು ಮಾತನಾಡಿದ ಅವರು, ಇದೆಲ್ಲ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದಿಲ್ಲ.
ಇದು ಪಿತೂರಿಯಾಗಿದೆ ಮತ್ತು ಸನಾತನ ಧರ್ಮದ ಮೇಲಿನ ದಾಳಿಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ತಿರುಪತಿ ದೇವಸ್ಥಾನ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.