ಮೈಸೂರು: ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಚಿನ್ನದ ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಯತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರಾಗಿದ್ದು, ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಆಹ್ವಾನ ನೀಡಲಾಗಿದೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ.