ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.
ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.