40 ವರ್ಷದ ರಾಜಕೀಯದಲ್ಲಿ ಸಿದ್ದುಗೆ ಮೊದಲ ನೋಟಿಸ್! ಸಿದ್ದರಾಮಯ್ಯ ಹೇಳಿದ್ದೇನು..?

Share to all

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಹಗರಣಕ್ಕೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದಲ್ಲಿ ಎ1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಇನ್ನೂ ನವೆಂಬರ್ 6ರಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನ ಬಲವಾಗಲು ಕಾರಣ, ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿ. ಸೋಮವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸ್​​ಆ್ಯಪ್ ಗ್ರೂಪ್​ನಲ್ಲಿ ನವೆಂಬರ್ 6ರ ಅವರ ದಿನದ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.

ಮೊದಲ ಬಾರಿ ತನಿಖೆ ಎದುರಿಸುತ್ತಿರುವ ಸಿದ್ದರಾಮಯ್ಯ

ಸಿದ್ದರಾಮಯ್ಯ ಶಾಸಕರಾಗಿ, ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಮುಖ್ಯಮಂತ್ರಿ ಆದವರು. ಸುದೀರ್ಘ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕ ಅಂಟಿಸಿಕೊಂಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ಎದುರಿಸಿರಲಿಲ್ಲ. ಇದೀಗ ಮುಡಾ ಸೈಟ್ ವಿಚಾರದಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಮೊದಲ ಬಾರಿ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

ನವೆಂಬರ್ 6ರಂದು ಸಿದ್ದರಾಮಯ್ಯ ಕಾರ್ಯಕ್ರಮಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ವೇಳಾಪಟ್ಟಿ ಪ್ರಕಾರ ನವೆಂಬರ್ 6ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ವಿವಿಧ ಗ್ರಾಮಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಸಿಎಂ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ವಿಚಾರಣೆ ಎದುರಿಸುವೆ ಎಂದ ಸಿಎಂ

ತಮಗೆ ಲೋಕಾಯುಕ್ತ ನೋಟಿಸ್‌ ಬಂದಿದೆ ಬುಧವಾರ ಮೈಸೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸವಣೂರು ತಾಲೂಕಿನ ಹುರುಳಿಕುಪ್ಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಚಾರಣೆಗೆ ಭಾಗಿಯಾಗುವೆ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದರು.

 

 


Share to all

You May Also Like

More From Author