ದೆಹಲಿ ರೈತರ ಸಭೆ ವಿಫಲ… ನಾಳೆಯಿಂದಲೇ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ..

Share to all

ದೆಹಲಿ ರೈತರ ಸಭೆ ವಿಫಲ… ನಾಳೆಯಿಂದಲೇ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ..

ಬೆಳಗಾವಿ: ಕೇಂದ್ರ ಸರ್ಕಾರದೊಂದಿಗೆ ನಡೆದ ರೈತರ ಸಭೆ ವಿಫಲವಾಗಿದೆ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವ ಭರವಸೆ ಮೂಡಿಸಿದ್ದ ಕೇಂದ್ರ ಸರ್ಕಾರ, ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯ ರೈತ ಸಂಘದ ಮುಖಂಡ ಚೂನಪ್ಪ ಪೂಜಾರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ಮಾತುಕತೆ ಹೆಸರಿನಲ್ಲಿ ಕಬ್ಬು ಬೆಳೆಗಾರರ ಜೊತೆ ಜೋಶಿ ನಾಟಕ ಮಾಡಿದ್ದಾರೆ. ದೆಹಲಿಗೆ ಕರೆಯಿಸಿ ರೈತರನ್ನು ಅವಮಾನಿಸಿದ್ದಾರೆ” ಎಂದು ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಪಿ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸದೇ ಕೇಂದ್ರ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿರುವ ಅವರು, ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರಹ್ಲಾದ್ ಜೋಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ, ನಾಳೆಯಿಂದಲೇ ರಾಷ್ಟ್ರೀಯ ಹೆದ್ದಾರಿ ಬಂದ್ ಸೇರಿದಂತೆ ಹೋರಾಟ ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಕರೆ ನೀಡಿವೆ.
ಕರ್ನಾಟಕ ಹಾಗೂ ಮಹಾರಾಷ್ಟ್ರದ ರೈತರು ಒಗ್ಗಟ್ಟಾಗಿ ಹೋರಾಟ ನಡೆಸಲಿದ್ದು, ರೈತರ ಬದುಕಿನ ಜೊತೆ ಚೆಲ್ಲಾಟವಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

“ರೈತರ ಹೆಸರಿನಲ್ಲಿ ರಾಜಕೀಯ ಮಾಡಬೇಡಿ… ಕೊಟ್ಟ ಮಾತನ್ನು ಉಳಿಸಿಕೊಳ್ಳಿ” ಎಂದು ರೈತ ಮುಖಂಡರು ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.
ಇದೀಗ ರೈತರ ಹೋರಾಟ ಯಾವ ರೂಪ ಪಡೆಯಲಿದೆ? ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಸರ್ಕಾರದ ಪ್ರತಿಕ್ರಿಯೆ ಏನು? ಎಂಬುದು ಕುತೂಹಲ ಮೂಡಿಸಿದೆ.

ಉದಯ ವಾರ್ತೆ
ಬೆಳಗಾವಿ.


Share to all

You May Also Like

More From Author