ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ದಾಳಿ: NWKRTC ಕಂಡಕ್ಟರ್ನ ಮೂರು ಮನೆಗಳ ಮೇಲೆ ಏಕಕಾಲಕ್ಕೆ ಶೋಧ!
ಹುಬ್ಬಳ್ಳಿ:
ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ದಾಳಿ ನಡೆದಿದೆ. NWKRTCಯ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅತ್ತಿಕಟ್ಟಿಮಠ ಅವರಿಗೆ ಸೇರಿದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ನಗರ ಡಿಪೋದಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಷಡಕ್ಷರಯ್ಯ ಅವರ ಆಸ್ತಿ ಪರಿಶೀಲನೆ ವೇಳೆ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಷಡಕ್ಷರಯ್ಯ ಅವರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ 20×30 ಅಳತೆಯ ಮನೆ ಸೇರಿದಂತೆ ಒಟ್ಟು ಮೂರು ಮನೆಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು, ಈ ಮೂರು ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಮನೆಗಳಲ್ಲಿನ ಆಸ್ತಿ ದಾಖಲೆಗಳು, ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.