Muda Scam: ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಸ್ನೇಹಮಯಿ ಕೃಷ್ಣ!

Share to all

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರಿಗೆ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ನೀಡಿದ್ದಾರೆ. ಪ್ರಕರಣದಲ್ಲಿ ಮತ್ತೊಂದು ಕಾನೂನುಬಾಹಿರ ಕೃತ್ಯ ನಡೆದಿದೆ. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಲ್ಲಿ ಪರಿತ್ಯಾಜನಾ ಪತ್ರ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಿನಲ್ಲಿ ಪರಿತ್ಯಾಜನ ಪತ್ರವನ್ನು ನೊಂದಾಯಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಎಫ್‌ಡಿಎ ಕೆ.ಸಿ.ಉಮೇಶ್ ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 223 ಮತ್ತು ಇತರೆ ಸೂಕ್ತ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸಬೇಕು. ಅಲ್ಲದೇ ಮುಡಾದಿಂದ ನಿಮ್ಮ ಪರವಾಗಿ ನೋಂದಾಯಿಸಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ಕೂಡಲೇ ರದ್ದು ಪಡಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತುರ್ತು ಸೂಚನೆ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಕುಟುಂಬದವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿಕೊಂಡು, ಮುಡಾದಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಬಗ್ಗೆ ಈಗಾಗಲೇ ನಿಮ್ಮನ್ನೂ ಸೇರಿದಂತೆ ಹಲವು ತನಿಖಾ ಸಂಸ್ಥೆಗಳಿಗೆ ದೂರರ್ಜಿಗಳನ್ನು ನೀಡಿದ್ದೇನೆ. ಆನಂತರ ನ್ಯಾಯಾಲಯದಲ್ಲಿ ಖಾಸಾಗಿ ದೂರರ್ಜಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳು, ವ್ಯವಸಾಯ ಜಮೀನುಗಳಲ್ಲಿನ ಜಾಗವನ್ನು ರಸ್ತೆಯೆಂದು ಭೂ ಮಾಲೀಕರು ಪರಿತ್ಯಾಜನ ಪತ್ರದ ಮೂಲಕ ನೀಡಿದಲ್ಲಿ, ಅಂತಹ ಜಾಗಗಳನ್ನು ಹಸ್ತಾಂತರಿಸಿಕೊಳ್ಳಬಾರದು ಎಂದು ಸ್ಪಷ್ಟವಾಗಿ ಕಾನೂನಿನಲ್ಲಿದೆ. ಆದರೆ, ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಮುಡಾ ಪ್ರಥಮ ದರ್ಜೆ ಸಹಾಯಕ ಕೆ.ಸಿ ಉಮೇಶ್‌, ನಿಮ್ಮ ಪರವಾಗಿ ಬಿ.ಎಂ.ಪಾರ್ವತಿ ಅವರಿಂದ ಪರಿತ್ಯಾಜನ ಪತ್ರವನ್ನು ನೋಂದಣಿ ಮಾಡಿಕೊಂಡಿದ್ದಾರೆ. ನಿಮ್ಮ ಹೆಸರಿನಲ್ಲಿ ಈ ಕಾನೂನು ಬಾಹಿರ ಕೃತ್ಯ ನಡೆದಿರುವುದರಿಂದ ಈ ವಿಚಾರವನ್ನು ತಾವು ಗಂಭೀರವಾಗಿ ಪರಿಗಣಿಸಿ, ಕೂಡಲೇ ಆ ಪರಿತ್ಯಾಜನ ಪತ್ರವನ್ನು ನಿಮ್ಮ ಪರವಾಗಿ ನೋಂದಣಿ ಮಾಡಿಸಿಕೊಂಡಿರುವ ಕೆ.ಸಿ.ಉಮೇಶ್ ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು ಹಾಗೂ ಇದೇ ರೀತಿಯಲ್ಲಿ ಮುಡಾದಿಂದ ನಿಮ್ಮ ಪರವಾಗಿ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ರದ್ದು ಪಡಿಸುವಂತೆ ಸ್ನೇಹಮಹಿ ಕೃಷ್ಣ ಕೋರಿದ್ದಾರೆ.


Share to all

You May Also Like

More From Author