ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಇಂದು ಭಾರಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಕರ್ನಾಟಕ ಸರ್ಕಾರದ ಆದೇಶ ಹೊರಡಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದು, ಒಪಿಡಿ ಸೇವೆ ಬಂದ್ ಆಗಿದೆ. ಎಮರ್ಜೆನ್ಸಿ ಸೇವೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ, ಎಮರ್ಜೆನ್ಸಿ ಸರ್ಜರಿ ಸೇವೆಗಳನ್ನು ಒದಗಿಸುವುದಾಗಿ ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.