ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ವಿಧಿವಶ!

Share to all

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ (59) ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ್ ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು.

ಇವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್‌ಸಿ, ಎಂಎಸ್‌ಸಿ ಪದವಿ ಪಡೆದರು. ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

ವಸಂತ ನಾಡಿಗೇರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು, ನಾಡಿನ ಹಿರಿಯ ಪತ್ರಕರ್ತರು, ಸಾಹಿತಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ,

ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


Share to all

You May Also Like

More From Author