ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಹೈಕೋರ್ಟ್ ಹೇಳಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ವಿರುದ್ಧ ಬಂಧಿರುವುದರಿಂದ ರಾಜ್ಯರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಹೈ ತೀರ್ಪನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮತ್ತೊಂದು ಸುತ್ತಿನ ಹೋರಾಟವನ್ನು ಹಮ್ಮಿಕೊಳ್ಳಲಿದೆ. ಬೆಂಗಳೂರು ಟು ಮೈಸೂರು ಪಾದಯಾತ್ರೆ ಮಾದರಿಯಲ್ಲಿ ಮತ್ತೊಂದು ಸುತ್ತಿನ ಹೋರಾಟವನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯ ಮಾಡಲಿವೆ. ಅಲ್ಲದೆ, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ಆದಲ್ಲಿ ಇದು ಸಿದ್ದರಾಮಯ್ಯಗೂ ನೈತಿಕವಾಗಿ ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಸಮಸ್ಯೆ ಸೃಷ್ಟಿಸಲಿದೆ.
ಹೈಕೋರ್ಟ್ನ ಈ ತೀರ್ಪು ನಿರೀಕ್ಷೆ ಮಾಡಿದ್ದ ಸಿಎಂ ಸಿದ್ದರಾಮಯ್ಯನವರು ಮುಂದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಎಲ್ಲವನ್ನೂ ಎದುರಿಸೋದಕ್ಕೆ ತಯಾರಾಗಿರುವ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್ ನೀಡಿದ್ದನ್ನು ಪ್ರಶ್ನಿಸಿ ಮುಂದಿನ ಹೋರಾಟ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೂ ಈಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲೂ ಸಿದ್ಧವಾಗಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧವೂ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡಿದ್ದಾರೆ.