ನವದೆಹಲಿ: ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಸೇರಿಸಲಾಗಿದೆ ಎಂದು ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದು, ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಇದರ ಬೆನ್ನಲ್ಲೇ ತಿರುಪತಿ ಲಡ್ಡು ವಿವಾದವನ್ನು ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ.
ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.
ಆಂಧ್ರಪ್ರದೇಶದ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಬೆನ್ನಲ್ಲೇ ದೇಶದೆಲ್ಲೆಡೆ ಭಾರೀ ಸಂಚಲಕ್ಕೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಲಾಗಿತ್ತು.